ಮಂಗಳವಾರ, ಜುಲೈ 16, 2013

ಸ್ವಾಭಿಮಾನ ಕುರಿತು ಅಂಬೇಡ್ಕರರ ಆತ್ಮಕತೆಯ ಪುಟಗಳಿಂದ.... ಭಾಗ-1




ರಘೋತ್ತಮ ಹೊ.ಬ, 

ಚಾಮರಾಜನಗರ
ಸೌಜನ್ಯ : ವಾರ್ತಾಭಾರತಿ

‘ಎಲ್ಲಿ ನಿಮ್ಮ ಸ್ವಾಭಿಮಾನಕೆ ಧಕ್ಕೆ ಬರುತ್ತದೆಯೋ ಅಲ್ಲಿ ನಿಮ್ಮ ಚಪ್ಪಲಿಯನ್ನು ಸಹ ಬಿಡಬೇಡಿ’. ಖಛ್ಝ್ಛಿ ್ಟಛಿಛ್ಚಿಠಿ  ಅಥವಾ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಶ್ರೇಷ್ಠ ನುಡಿ ಗಳಿವು. ಬಹುಶಃ ವ್ಯಕ್ತಿ ಗೌರವ ಅಥವಾ ಸ್ವಾಭಿಮಾನದ ಬಗ್ಗೆ ಅಂಬೇಡ್ಕರರು ತಲೆಕೆಡಿಸಿ ಕೊಂಡಷ್ಟು ಈ ವಿಶ್ವದಲ್ಲಿ ಯಾರೂ ತಲೆಕೆಡಿಸಿ ಕೊಂಡಿರಲಿಕ್ಕಿಲ್ಲ. ಅದರಲ್ಲೂ ದಲಿತರ ಸ್ವಾಭಿಮಾನದ ಪ್ರಶ್ನೆ? ಹಾಗೆಯೇ ದಲಿತ ಮಹಿಳೆಯ ಸ್ವಾಭಿಮಾನದ ಪ್ರಶ್ನೆ? ಇಂತಹ ಪ್ರಶ್ನೆಗಳಿಗೆ ಉತ್ತರ ಹುಡುಕುವುದರಲ್ಲಿಯೇ, ಶೋಷಿತರಿಗೆ ಸ್ವಾಭಿಮಾನದ ಪಾಠ ಕಲಿಸುವುದರಲ್ಲಿಯೇ, ಆತ್ಮಗೌರವ ತಂದುಕೊಡುವುದರಲ್ಲಿಯೇ ಅಂಬೇಡ್ಕರ್ ತಮ್ಮ ಜೀವನವಿಡೀ ಶ್ರಮಿಸಿದರು. ಒಂದರ್ಥದಲ್ಲಿ ಅವರು ಸ್ವಾಭಿಮಾನದ ಕಿಡಿ.

ಕಿಡಿ ಅಥವಾ ಕೋಪ, ಹಾಗೆಂದಾಕ್ಷಣ ಅಂಬೇಡ್ಕರರು ಇದ್ದಕ್ಕಿದ್ದ ಹಾಗೆಯೇ ದಲಿತರ ಸ್ವಾಭಿಮಾನದ ಬಗ್ಗೆ ಈ ಪರಿ ತಲೆಕೆಡಿಸಿ ಕೊಂಡರೆ ಅಥವಾ ಯಾರದೋ ಮೇಲಿನ ದ್ವೇಷಕ್ಕೆ ಹಾಗೆ ನಿರ್ಧಾರಕ್ಕೆ ಬಂದರೆ? ಖಂಡಿತ ಇಲ್ಲ. ಹಾಗಿದ್ದರೆ? 1935 ಅಕ್ಟೋಬರ್ 13ರಂದು ನಾಸಿಕ್‌ನ ಇಯೋಲಾ ಎಂಬಲ್ಲಿ ಅಂಬೇಡ್ಕರರು ಕೇಳುವ ಪ್ರಶ್ನೆಗಳನ್ನು ನೋಡಿ.

 1. ಈ ಭಾರತದಲ್ಲಿ ನೀವೊಬ್ಬರೇ(ದಲಿತರು) ಯಾಕೆ ಶೋಷಣೆಗೊಳಗಾಗುತ್ತಿದ್ದೀರಿ?
2. ಹಿಂದೂ ಧರ್ಮ ನಿಮಗೆ ಕರುಣೆ ತೋರಿಸುತ್ತಿಲ್ಲವೇಕೆ?
3. ಹಿಂದುತ್ವದಲ್ಲಿ ನಿಮಗೆ ಸಮಾನತೆ ಇದೆಯೇ?
4. ಹಿಂದುತ್ವದಲ್ಲಿ ನಿಮಗೆ ಸ್ವಾತಂತ್ರ ವಿದೆಯೇ?

ಬಹುಶಃ ಈ ಪ್ರಶ್ನೆಗಳು ಹಿಂದೂಗಳಿಗೆ ಎಲ್‌ಕೆಜಿ ಮಕ್ಕಳ ಪ್ರಶ್ನೆಗಳ ಹಾಗೆ ಕಾಣ ಬಹುದು. ಆದರೆ ಶೋಷಿತರಿಗೆ? ಅವು ಅಂಬೇಡ್ಕರರ ಸ್ವಾಭಿಮಾನದ ಕಿಡಿಯ ಸಣ್ಣ ಕಣಗಳಂತೆ ಕಂಡರೆ ಅತಿಶಯೋಕ್ತಿ ಯೇನಲ್ಲ. ಯಾಕೆಂದರೆ ಅಂಬೇಡ್ಕರರಿಂದ ಇಂತಹ ಪ್ರಶ್ನೆಗಳನ್ನು ಎದುರಿಸಿದ ಯಾವುದೇ ದಲಿತನಾದರೂ ‘ತನ್ನೊಬ್ಬನ ಮೇಲೆ ಯಾಕೆ ದೌರ್ಜನ್ಯ ನಡೆಯುತ್ತಿದೆ? ಯಾಕೆಂದರೆ ನಾನು ಕೀಳು ಜಾತಿಯವನು. 

ಹಿಂದೂಗಳೆಲ್ಲ ನಮಗೆ ಕರುಣೆ ತೋರಿಸುತ್ತಿಲ್ಲ ಯಾಕೆಂದರೆ ನಾವು ಕರುಣೆಗೆ ಅರ್ಹರಲ್ಲ. ಹಿಂದೂಗಳೆಲ್ಲ ನಮಗೆ ಸಮಾನತೆ ನೀಡುತ್ತಿಲ್ಲ. ಯಾಕೆಂದರೆ ನಾವು ಸಮಾನತೆಗೆ ಅರ್ಹರಲ್ಲ. ಹಿಂದುತ್ವದಲ್ಲಿ ನಮಗೆ ಸ್ವಾತಂತ್ರವಿಲ್ಲ. ಯಾಕೆಂದರೆ ನಾವು ಸ್ವಾತಂತ್ರಕ್ಕೂ ಕೂಡ ಅರ್ಹರಲ್ಲ’ ಎಂದುಕೊಳ್ಳುತ್ತಾನೆಯೇ? ಖಂಡಿತ ಇಲ್ಲ. ಬದಲಿಗೆ ಆತ ಅಂಬೇಡ್ಕರರ ಪ್ರಶ್ನೆಗಳ ಬಗ್ಗೆ ಗಹನವಾಗಿ ಚಿಂತಿಸುತ್ತಾನೆ. ನಾನು ಯಾರು? ನಾನೇಕೆ ಹೀಗಾದೆ? ನನ್ನ ಹೀನಾಯ ಸ್ಥಿತಿಗೆ ಕಾರಣರಾರು? ಎಂದು ತನ್ನನ್ನೆ ತಾನು ಪ್ರಶ್ನಿಸಿಕೊಳ್ಳುತ್ತಾನೆ.

ಒಮ್ಮೆ ಆತ ಪ್ರಶ್ನಿಸಿಕೊಳ್ಳಲು ಪ್ರಾರಂಭಿಸಿದನೆಂದರೆ ಮುಗಿಯಿತು ಆತ ಸ್ವಾಭಿಮಾನಿಯಾದನೆಂದೇ ಅರ್ಥ. ಅಂದಹಾಗೆ ಅಂಬೇಡ್ಕರರು ಬಯಸಿದ್ದು ಇದನ್ನೆ! ಹಾಗೆ ಹೇಳುವುದಾದರೆ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಪ್ರಶ್ನೆ ಇಲ್ಲಿಗೇ ಮುಗಿಯುವುದಿಲ್ಲ. ಈ ನಿಟ್ಟಿನಲ್ಲಿ ಅವರ ಆತ್ಮಕತೆಯ ಪುಟಗಳತ್ತ ಚಿತ್ತಹರಿಸುವುದಾದರೆ, ಅಂಬೇಡ್ಕರರು 1936 ಮೇ 17ರಂದು ಮಹಾ ರಾಷ್ಟ್ರದ ಥಾಣೆ ಎಂಬಲ್ಲಿ ತನ್ನ ಸ್ವಾಭಿಮಾನವನ್ನು ಕೆಣಕಿದ ಬಾಲ್ಯದ ಕೆಟ್ಟ ಘಟನೆಯನ್ನು ಹೀಗೆ ವಿವರಿಸುತ್ತಾರೆ ‘ನಾನು ಇಂಧೋರ್ ಸಮೀಪದ ಮಹೌ ಎಂಬಲ್ಲಿ ಹುಟ್ಟಿದೆ. 

ನನ್ನ ತಂದೆ ಮಹೌನಲ್ಲಿ ಸೇನೆಯ ಸುಬೇದಾರ್ ಹುದ್ದೆಯಲ್ಲಿದ್ದರು. ನಾವು ಅಲ್ಲಿದ್ದಷ್ಟು ದಿನ ಅಂದರೆ ಸೇನೆಯ ಕ್ವಾರ್ಟರ್ಸ್‌ನ ಕಾರ್ಯಸ್ಥಾನದಲ್ಲಿಷ್ಟೂ ದಿನ ನಮಗೆ ಅಸ್ಪಶ್ಯತೆಯ ಗಂಧ ಗಾಳಿಯೂ ತಿಳಿದಿರಲಿಲ್ಲ. ಆದರೆ ನನ್ನ ತಂದೆ ಸೇನೆಯಿಂದ ನಿವೃತ್ತರಾಗಿ ಸತಾರಕ್ಕೆ ಬಂದಾಗ ನನಗೆ ಅಸ್ಪಶ್ಯತೆಯ ಪ್ರಥಮ ಅನುಭವವಾಯಿತು. ಮುಖ್ಯವಾಗಿ ಅದು ಕ್ಷೌರಕ್ಕೆ ಸಂಬಂಧಪಟ್ಟಂತೆ.

ಯಾಕೆಂದರೆ ಸತಾರದಲ್ಲಿ ಅಷ್ಟೊಂದು ಕ್ಷೌರಿಕ ರಿದ್ದರೂ ಯಾವುದೇ ಕ್ಷೌರಿಕನೂ ನಮ್ಮ ತಲೆಕೂದಲು ಕತ್ತರಿಸಲು ಮುಂದೆ ಬರುತ್ತಿರಲಿಲ್ಲ. ಈ ಕಾರಣಕ್ಕಾಗಿ ದುರಂತವೆಂದರೆ ನಮ್ಮ ಹಿರಿಯ ಅಕ್ಕನೇ ನಮ್ಮನ್ನು ಮನೆಯ ಹೊರಗಡೆ ಕೂರಿಸಿ ನಮ್ಮ ತಲೆಗೂದಲನ್ನು ಕತ್ತರಿಸಬೇಕಾಗುತ್ತಿತ್ತು! ಒಂದರ್ಥದಲ್ಲಿ ಇದು ನನ್ನನ್ನು ವಿಚಲಿತ ಗೊಳಿಸಿತು. ಯಾಕೆ ಹೀಗೆ ಇಷ್ಟೊಂದು ಕ್ಷೌರಿಕರಿದ್ದರೂ ನಮ್ಮ ಕೂದಲನ್ನು ಕತ್ತರಿಸಲು ಅವರು ಮುಂದೆ ಬರುತ್ತಿಲ್ಲವೇಕೆ? ಎಂಬ ಪ್ರಶ್ನೆ ನನ್ನನ್ನು ಪದೇ ಪದೇ ಕಾಡತೊಡಗಿತು’.

ಮತ್ತೊಂದು ಘಟನೆ ‘ನಮ್ಮ ತಂದೆ ಗೋರೇಗಾಂವ್‌ನಲ್ಲಿರಬೇಕಾದರೆ ಅವರು ಒಮ್ಮೆ ನಮ್ಮನ್ನು ಗೋರೇಗಾಂವ್‌ಗೆ ಬನ್ನಿ ಎಂದು ಕರೆದರು. ಹಾಗೆಯೇ ಪ್ರಯಾಣದ ಖರ್ಚಿಗೆ ಎಂದು ಅವರು ಸ್ವಲ್ಪ ಹಣವನ್ನೂ ಕಳುಹಿಸಿ ದ್ದರು. ಆ ಹಣದಿಂದ ಹೊಸಬಟ್ಟೆ ಖರೀದಿಸಿ, ರೈಲಿನಲ್ಲಿ ಪಯಣಿಸುವ ಕನಸು ಕಾಣುತ್ತಾ ಖುಷಿಯಿಂದ ನಾನು, ನನ್ನ ಸಹೋದರ ಮತ್ತು ನನ್ನ ಅಕ್ಕನ ಮಗಳು ಮೂವರು ಗೋರೆಗಾಂವ್ ನತ್ತ ಹೊರಟೆವು. ಹಾಗೆಯೇ ನಾವು ಬರುವುದಾಗಿ ಅದಾಗಲೇ ನಮ್ಮ ತಂದೆಯವರಿಗೆ ಪತ್ರವೊಂದನ್ನು ಸಹ ಕಳುಹಿಸಿದ್ದೆವು. ಆದರೆ ಅದು ಅವರಿಗೆ ತಲುಪಿರಲಿಲ್ಲ. 

ಆ ಕಾರಣಕ್ಕಾಗಿ ನಾವು ಗೋರೆಗಾಂವ್ ತಲುಪಿದಾಗ ನಮ್ಮ ತಂದೆಯವರು ಕಳುಹಿಸಿರಬಹುದೆನ್ನುವ ಸೇವಕ ನಿಗಾಗಿ ನಾವು ಹುಡುಕಿದರೂ ಆತ ನಮಗೆ ಕಾಣಲಿಲ್ಲ. ವಿಧಿಯಿಲ್ಲದೆ ಮುಕ್ಕಾಲು ಗಂಟೆ ನಾವು ಸ್ಟೇಷನ್‌ನಲ್ಲಿಯೇ ಕಳೆದೆವು. ಯಾರಾದರೂ ಬರಬಹುದು ನಮ್ಮನ್ನು ಕರೆದುಕೊಂಡು ಹೋಗಬಹುದು ಎಂದು ಕಾಯುತ್ತಾ ಕುಳಿತೆವು. ಅದೇ ಸಮಯಕ್ಕೆ ಅಲ್ಲಿಗೆ ಬಂದ ಸ್ಟೇಷನ್ ಮಾಸ್ಟರ್ ‘ನೀವು ಯಾರಿಗಾಗಿ ಕಾಯುತ್ತಿದ್ದೀರಿ? ಯಾವ ಜಾತಿ? ಎಲ್ಲಿಗೆ ಹೋಗಬೇಕು?’ ಎಂದೆಲ್ಲ ಕೇಳಿದ. ನಾನು ಅವನಿಗೆ ‘ನಾವು ಮಹಾರ್ ಜಾತಿಗೆ ಸೇರಿದವರು’ ಎಂದು ನೇರವಾಗಿಯೇ ಹೇಳಿದೆ. 

ನಾನು ಹಾಗೆನ್ನುತ್ತಲೇ ಆತ ಆಘಾತಕ್ಕೊಳಗಾದ! ತಕ್ಷಣ ನಮ್ಮಿಂದ ಐದು ಹೆಜ್ಜೆ ಹಿಂದೆ ಸರಿದ! ಆದರೆ ನಾವು ಉತ್ತಮವಾಗಿ ಡ್ರೆಸ್ ಮಾಡಿಕೊಂಡಿದ್ದನ್ನು ನೋಡಿ ಉತ್ತಮ ಕುಲಕ್ಕೆ ಸೇರಿದವರಿರಬಹುದೆಂದುಕೊಂಡು ಎತ್ತಿನ ಗಾಡಿಯೊಂದನ್ನು ವ್ಯವಸ್ಥೆ ಮಾಡುವುದಾಗಿ ಹೇಳಿದ. ಆದರೆ ನಾವು ಮಹಾರ್ ಜಾತಿಯವರಾಗಿದ್ದರಿಂದ ಯಾವುದೇ ಎತ್ತಿನಗಾಡಿಯವನು ನಮ್ಮನ್ನು ಕೂರಿಸಿಕೊಂಡು ಹೋಗಲು ಮುಂದೆ ಬರಲಿಲ್ಲ. ಕಡೆಗೂ ಒಬ್ಬ ಒಪ್ಪಿಕೊಂಡನಾದರೂ ಆತನ ಕಂಡೀಷನ್ ಏನೆಂದರೆ ‘ನಾನು ಗಾಡಿ ಚಲಾಯಿಸುವುದಿಲ್ಲ. 

ನಿಮ್ಮಲ್ಲೆ ಯಾರಾದರೊಬ್ಬರು ಗಾಡಿ ಚಲಾಯಿಸಿ. ನಾನು ನಿಮ್ಮ ಜೊತೆ ಬರುತ್ತೇನೆ’ ಎಂಬುದಾಗಿತ್ತು! ಅಂದಹಾಗೆ ಆತ ಹಾಗೆ ಬರುತ್ತೇನೆ ಎಂದಾಗ ಸಮಯ ಸಂಜೆ ಏಳು ಗಂಟೆಯಾಗಿತ್ತು. ಹಾಗೆಯೇ ಮಿಲಿಟರಿ ಏರಿಯಾದವನಾದ್ದರಿಂದ ನನಗೆ ಗಾಡಿ ಚಲಾಯಿಸುವುದು ಕಷ್ಟವೇನಿರಲಿಲ್ಲ. ಅವನ ಕಂಡೀಷನ್‌ಗೆ ಒಪ್ಪಿಕೊಂಡು ನಾನು ಮತ್ತು ಉಳಿದ ಮಕ್ಕಳೆಲ್ಲ ಗಾಡಿಯಲ್ಲಿ ಗೋರೆಗಾಂವ್ ಕಡೆ ಹೊರಟರೆವು.

ಸ್ವಲ್ಪ ದೂರ ಹೋದನಂತರ ಒಂದು ಒಂದು ಊರಿನ ಹೊರಗಡೆ ಒಂದು ಕೊಳ ಕಂಡೆವು. ‘ಮುಂದೆ ಎಲ್ಲಿಯೂ ನಿಮಗೆ ನೀರು ಸಿಗುವ ಸಾಧ್ಯತೆ ಇಲ್ಲವಾದ್ದರಿಂದ ನೀವು ಇಲ್ಲಿಯೇ ನಿಮ್ಮ ಊಟವನ್ನು ಮಾಡಬಹುದು’ ಎಂದು ಗಾಡಿಯವನು ನಮಗೆ ಸೂಚಿಸಿದ. ಅವನು ಹೇಳಿದ ಹಾಗೆ ಗಾಡಿಯಿಂದ ಇಳಿದ ನಾವು, ಅಲ್ಲಿಯೇ ನಾವು ತಂದಿದ್ದ ಬುತ್ತಿಯನ್ನು ತಿಂದು ಕೆಸರು ಕೆಸರಾದ ಗಬ್ಬುನಾರುತ್ತಿದ್ದ ಆ ಕೊಳದ ನೀರನ್ನೆ ಕುಡಿದೆವು. ಗಾಡಿಯವ ಗ್ರಾಮದ ಒಳಕ್ಕೆ ಹೋಗಿ ಅಚ್ಚುಕಟ್ಟಾಗಿ ತನ್ನ ಊಟ ಮುಗಿಸಿ ಮತ್ತೆ ನಮ್ಮ ಬಳಿ ಬಂದ! 

ಇತ್ತ ನಮ್ಮ ಪ್ರಯಾಣ ಮುಂದುವರಿದ ಹಾಗೇ ಕತ್ತಲು ಹೆಚ್ಚಾಗತೊಡಗಿತ್ತು. ಯಾವುದೇ ಬೀದಿ ದೀಪವಾಗಲೀ ಬೆಳಕಿನ ಸಣ್ಣ ತುಣುಕಾಗಲೀ ನಮಗೆ ಕಾಣಲಿಲ್ಲ. ಈ ಕಾರಣಕ್ಕಾಗಿ ಭಯ ಗೊಂಡ ನಾವು ಕತ್ತಲೆ ಮತ್ತು ಒಂಟಿತನ ದಿಂದಾಗಿ ಹೆದರಿ ಜೋರಾಗಿ ಅಳಲಾರಂಭಿಸಿದೆವು. ಅಷ್ಟೊತ್ತಿಗಾಗಲೇ ಅರ್ಧರಾತ್ರಿಯಾ ಗಿತ್ತು. ಆ ಸಂದರ್ಭದಲ್ಲಿ ನಾವು ಎಂತಹ ಸ್ಥಿತಿ ತಲುಪಿದ್ದೆವೆಂದರೆ ‘ನಾವು, ನಮ್ಮಪ್ಪಣಾಣೆಗೂ ಗೋರಾಗಾಂವ್ ತಲುಪುವುದಿಲ್ಲ’ ಎಂದು ಹತಾಶೆಗೊಂಡೆವು.ಹಾಗೆ ಮುನ್ನಡೆಯುತ್ತಲೇ ನಾವು ಒಂದು ಚೆಕ್‌ಪೋಸ್ಟ್ ತಲುಪಿದೆವು. ಚೆಕ್‌ಪೋಸ್ಟ್‌ನ ಕಾವಲುಗಾರನನ್ನು ನಾನು ‘ಇಲ್ಲಿ ಎಲ್ಲಾದರೂ ತಿನ್ನಲು ಏನಾದರೂ ಸಿಗುತ್ತದೆಯಾ?’ ಎಂದು ಕೇಳಿದೆ.ಕಾವಲುಗಾರ ಪರ್ಷಿ ಯನ್ ಭಾಷೆ ಮಾತನಾಡುತ್ತಿದ್ದನಾದ್ದ ರಿಂದ ಅವನ ಜೊತೆ ಪರ್ಷಿಯನ್ ಭಾಷೆಯಲ್ಲಿಯೇ ಮಾತನಾಡಿದೆ.

ಕಾಮೆಂಟ್‌ಗಳಿಲ್ಲ: